ಬೆಂಗಳೂರು: ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಹೆಡ್ ಕ್ವಾರ್ಟರ್ ಅವರ ಹೆಸರು ಹಾಗೂ ಸೀಲಿನೊಂದಿಗೆ ಬಿಜೆಪಿಯ 100 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್ ಹೆಸರಿನಲ್ಲಿ ಬಿಡುಗಡೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಆರೋಪಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಕಾಂಗ್ರೆಸ್ ದಿವಾಳಿತನಕ್ಕೆ ಸಾಕ್ಷಿ ಎಂದು ಟೀಕಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಅವರು ಹೀಗೆ ಮಾಡಿಲ್ಲವಾದರೆ ದೂರು ಕೊಡಬೇಕಿತ್ತು ಎಂದು ತಿಳಿಸಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಮಣಿಸಲು ಸಾಧ್ಯವಾಗದೆ ಈ ರೀತಿ ಹತಾಶರಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಮ್ಮಲ್ಲಿ ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದ ಘನತೆಗೆ ಈ ಮೂಲಕ ಅವರು ಧಕ್ಕೆ ತಂದುಕೊಳ್ಳುತ್ತಿದ್ದಾರೆ ಎಂದು ನುಡಿದರು.
ಇದು ಚುನಾವಣೆ ಪ್ರಾರಂಭದ ಹಂತ. ಚುನಾವಣೆಯ ಅಂತಿಮ ಕಾಲದಲ್ಲಿ ಇನ್ನೂ ಯಾವ್ಯಾವ ತಳಮಟ್ಟಕ್ಕೆ ಇಳಿಯಬಹುದು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಈ ರೀತಿ ಮಾಡಿದ್ದರೆ ಇದರ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ ಬಹಿರಂಗ ಕ್ಷಮೆ ಯಾಚಿಸಬೇಕು; ಇಲ್ಲವಾದರೆ ಸಂಬಂಧಿತರಿಗೆ ದೂರು ಕೊಡಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಈಗಾಗಲೇ ಕಾಂಗ್ರೆಸ್ ಪಕ್ಷದ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ, ದೆಹಲಿಯ ಚುನಾವಣಾ ಕಮೀಷನರ್‌ಗೆ ದೂರಿನ ಪ್ರತಿಯನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಈ ತೃತೀಯ ದರ್ಜೆಯ ರಾಜಕಾರಣವನ್ನು ಬಿಜೆಪಿ ಖಂಡಿಸುವುದಾಗಿ ಅವರು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ