ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ವಿಕಾಸಸೌಧದ ಕಾರ್ಯಾಲಯದಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕ ಇಲಾಖೆಯ ಮೂಲಕವಾಗಿ ರಾಜ್ಯದ ಶ್ರಮಿಕ ವರ್ಗದ ಸರ್ವಾಂಗೀಣ ಅಭಿವೃದ್ಧಿಗೆ ಹಮ್ಮಿಕೊಳ್ಳಲಿರುವ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಠಿ ನಡೆಸಿದರು.
ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳಾದ ಆಟೋ, ಟ್ಯಾಕ್ಸಿ, ಮಾಕ್ಸಿಕ್ಯಾಬ್, ಬಸ್, ಲಾರಿ, ಇತ್ಯಾದಿ ವಾಹನಗಳ ಚಾಲಕರು ಹಾಗೂ ಕಾರ್ಮಿಕರ ಸಾಮಾಜಿಕ ಹಾಗೂ ಆರ್ಥಿಕವಾಗಿ ದುರ್ಬಲರಾಗಿದ್ದು, ಅವರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಮೋಟಾರು ಕಾಯ್ದೆ ಹಾಗೂ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಹಾಗೂ ಇದಕ್ಕಾಗಿ ಮೋಟಾರು ವಾಹನಗಳ ತೆರಿಗೆಯ ಮೇಲೆ ಶೇ. 05 % ರಷ್ಟು ಸುಂಕ ಸಂಗ್ರಹ ಮಾಡಿ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು ಎಂದರು.
ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ (Out Source ) ಮಾನವ ಸಂಪನ್ಮೂಲ ಒದಗಿಸುತ್ತಿರುವ ಸಂಸ್ಥೆಗಳ ನಿಯಂತ್ರಣಕ್ಕಾಗಿ ವಿಶೇಷ ಕಾನೂನು ಜಾರಿಗೊಳಿಸಲಾಗುವುದು ಸೆಪ್ಟೆಂಬರ್ 15, 2021 ರ ಒಳಗಾಗಿ ಕಟ್ಟಡ ಕಾರ್ಮಿಕರ ವಿವಿಧ ಸಾಮಾಜಿಕ ಭದ್ರತಾ ಸೇವೆಗಳಿಗಾಗಿ ಅರ್ಜಿ ಸಲ್ಲಿಸಿ, ಬಾಕಿ ಉಳಿದಿರುವ ಪ್ರಕರಣಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇತ್ಯರ್ಥಪಡಿಸಲು ಕಾರ್ಮಿಕ ಅದಾಲತ್ ನಡೆಸಲಾಗುವುದು ಎಂದರು.
ಕಾರ್ಮಿಕ ಇಲಾಖೆಯಲ್ಲಿ ಬೋನಸ್, ಗ್ರಾಚ್ಯುಟಿ, ಮೆಟರ್ನಿಟಿ, ಗುತ್ತಿಗೆ ಕಾರ್ಮಿಕರ ಪ್ರಕರಣಗಳು, ಸಂಘಟನೆ ಹಾಗೂ ಆಡಳಿತ ಮಂಡಳಿ ನಡುವೆ ಉಂಟಾಗುವ ವಿವಾದಾಸ್ಪದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಾಗೂ ಅಪೀಲುಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಮತ್ತು ಈ ಬಗ್ಗೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾರ್ಮಿಕ ಆಯುಕ್ತರಿಗೆ ಪ್ರತಿ ತಿಂಗಳು ಗುರಿ ನಿಗದಿಪಡಿಸಲಾಗುವುದು ಎಂದರು.
ವಲಸೆ ಕಾರ್ಮಿಕರಿಗೆ ಬೆಂಗಳೂರು, ಬೆಳಗಾವಿ, ಕಲಬುರಗಿ, ಹಾಸನ, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಮೈಸೂರು ಮುಂತಾದ ಕಡೆ ತಾತ್ಕಾಲಿಕ ವಸತಿ ವ್ಯವಸ್ಥೆ ನಿರ್ಮಿಸಲು ಆಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಹಾಗೂ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಒಳಪಡುವ ಸುಮಾರು 101 ವರ್ಗಗಳನ್ನು ಗುರುತಿಸಲಾಗಿದ್ದು, ಅವರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕ್ರಮ ವಹಿಸಲಾಗುವುದು ಎಂದರು.
ಇ.ಎಸ್.ಐ ವ್ಯಾಪ್ತಿಗೆ ಒಳಪಡುವ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಹಾಗೂ ಪ್ರತಿ ಜಿಲ್ಲೆಗೆ ಒಂದು ಇ.ಎಸ್.ಐ ಆಸ್ಪತ್ರೆಯನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಅಲ್ಲದೆ ಸದರಿ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗವನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರುವ ಕಾರ್ಮಿಕರಿಗೆ ತುರ್ತಾಗಿ ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಕೋಟಾದಲ್ಲಿ ಪಡೆದುಕೊಂಡು ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ