ಬೆಂಗಳೂರು: ಕಾಂಗ್ರೆಸ್ ಪಕ್ಷದವರು ರಾಜ್ಯದ ಬಿಜೆಪಿ ಸರಕಾರ ಮಾಡಿದ ಎಲ್ಲ ಉತ್ತಮ ಕಾರ್ಯಗಳನ್ನು ಮರೆಮಾಚಿ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್‍ನ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರ ಅಪಪ್ರಚಾರದ ಹೊರತಾಗಿಯೂ ರಾಜ್ಯದಲ್ಲಿರುವ ದಲಿತರು, ಹಿಂದುಳಿದವರು ಮತ್ತು ಪರಿಶಿಷ್ಟ ಜಾತಿ, ಪಂಗಡದವರು ಬಿಜೆಪಿಯನ್ನು ಸ್ಪಷ್ಟವಾಗಿ ಬೆಂಬಲಿಸುತ್ತಿರುವುದು ನಮ್ಮ ಕಣ್ಣ ಮುಂದೆ ಕಂಡುಬರುತ್ತಿದೆ. ಇದರಿಂದ ಹತಾಶರಾಗಿ ಕಾಂಗ್ರೆಸ್‍ನವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಬಂದ ಬಳಿಕ ಅಧಿಕಾರದಲ್ಲಿ ಇರುವಂಥ ಒಂದು ರಾಜ್ಯವನ್ನೂ ಕಳೆದುಕೊಂಡ ಕಾಂಗ್ರೆಸ್‍ನವರು ಹತಾಶ ಭಾವನೆಗೆ ಒಳಗಾಗಿದೆ. ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಆತಂಕ ಕಾಂಗ್ರೆಸ್‍ನವರ ಮನಸ್ಸಿನಲ್ಲಿದೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಈ ಬಾರಿ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ- ಪಂಗಡಕ್ಕೆ 28 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಕ್ರಿಯಾಯೋಜನೆಯೂ ಸಿದ್ಧವಾಗುತ್ತಿದೆ ಎಂದರು.
ಹಿಂದುಳಿದ ವರ್ಗದ ಎಲ್ಲ ಜಾತಿಗಳನ್ನು ಗಮನದಲ್ಲಿ ಇಟ್ಟುಕೊಂಡು ಅನೇಕ ಯೋಜನೆ ಜಾರಿಗೊಳಿಸಲಾಗುತ್ತಿದೆ. ದೀನದಯಾಳ್ ಜಿ ಅವರ ಹೆಸರಿನಲ್ಲಿ ಪ್ರಥಮ ಬಾರಿಗೆ ರಾಜ್ಯದ 5 ಕೇಂದ್ರೀಕೃತ ವಿದ್ಯಾಸಂಸ್ಥೆ ಇರುವ ಕಡೆ ಸಾವಿರ ಮಕ್ಕಳ ಹಾಸ್ಟೆಲ್ ಮಾಡುತ್ತಿರುವುದು ಅದ್ಭುತ ಕಲ್ಪನೆ ಎಂದರು.
ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಲೋಕಾಯುಕ್ತವನ್ನು ಬುಡಮೇಲು ಮಾಡಿ ಎಸಿಬಿಯನ್ನು ತಂದರು ಎಂದು ಆರೋಪಿಸಿದರಲ್ಲದೆ, ನಿಮ್ಮ ಅವಧಿಯಲ್ಲಿ ಆದ ಎಷ್ಟು ಅಕ್ರಮಗಳ ತನಿಖೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಸಮನ್ವಯದ ಕೊರತೆಯನ್ನು ಮರೆಮಾಚಲು ಬಿಜೆಪಿ ಸರಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ನುಡಿದರು.
ಕಾಂಗ್ರೆಸ್‍ನ ಎಲ್ಲ ಹೇಳಿಕೆಗಳು, ಆಕ್ರೋಶಗಳು, ಮಾತುಗಳು, ವಿಚಾರಗಳು ಕೇವಲ ರಾಜಕೀಯ ಬೂಟಾಟಿಕೆಗಾಗಿ ಹಾಗೂ ಜನರ ಭಾವನೆಗಳನ್ನು ಬೇರೆ ಕಡೆ ತಿರುಗಿಸುವ ಉದ್ದೇಶವನ್ನು ಹೊಂದಿವೆ. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯವನ್ನು ಮರೆಮಾಚಲು ಇಂಥ ಟೀಕೆ ಮಾಡುತ್ತಿದ್ದಾರೆ. ಸತ್ಯಕ್ಕೆ ಅಪಚಾರವಾಗುವ ಟೀಕೆ- ಆರೋಪ ನಿಲ್ಲಿಸಿ ಎಂದು ಒತ್ತಾಯಿಸಿದರು.
ಪಿಎಸ್‍ಐ ನೇಮಕ ಪ್ರಕರಣದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೋಷಿಗಳು ಮತ್ತು ನಿರ್ದೋಷಿಗಳನ್ನು ತನಿಖಾ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು.
ನಿರುದ್ಯೋಗಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟ ಇಲ್ಲ: ಸೋಮಶೇಖರ್
ರಾಜ್ಯದ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ನಿರುದ್ಯೋಗಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟ ಆಡಬಾರದು ಎಂಬ ಉದ್ದೇಶ ನಮ್ಮದು ಎಂದು ತಿಳಿಸಿದರು. ಅಂತೆಕಂತೆಗಳಿಗೆ ಉತ್ತರ ಕೊಡುವುದಿಲ್ಲ. ಪ್ರಾಮಾಣಿಕವಾಗಿ ತನಿಖೆ ಆಗಬೇಕಿದೆ ಎಂದರು. ಮಾಹಿತಿ ಕೊಟ್ಟರೆ ಸಮರ್ಥವಾಗಿ ತನಿಖೆ ನಡೆಯಲು ಸಹಕಾರಿ ಎಂದು ತಿಳಿಸಿದರು.
ರಾಮನಗರ ಜಿಲ್ಲೆ ಒಕ್ಕಲಿಗರ ಜಿಲ್ಲೆ ಎಂಬ ಕಾರಣಕ್ಕೆ ನಾಯಕತ್ವಕ್ಕೆ ಪೈಪೋಟಿ ನಡೆಯುತ್ತಿದೆ. 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿರುವ ಕಾರಣ ಸಚಿವ ಡಾ.ಅಶ್ವತ್ಥನಾರಾಯಣ್ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಲ್ಲಿ ಅಭಿವೃದ್ಧಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅವರ ಕಾರ್ಯಕ್ರಮಗಳಲ್ಲಿ ಗಲಾಟೆಯೂ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಅಶ್ವತ್ಥನಾರಾಯಣ್ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಡಾ.ಅಶ್ವತ್ಥನಾರಾಯಣ್ ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ 2 ವರ್ಷಗಳಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇದನ್ನು ಸಹಿಸಲಾಗದೆ ಆರೋಪ ಮುಂದುವರೆದಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಅಸ್ತಿತ್ವಕ್ಕಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವರು ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು. ಡಾ.ಅಶ್ವತ್ಥನಾರಾಯಣ ಅವರ ತೇಜೋವಧೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಎಂದ ಅವರು, ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಡಬಾರದು ಎಂದಿದೆಯೇ? ದಾಖಲಾತಿ ಕೊಡಿ ಎಂದು ಕೇಳಿದ್ದಾರೆ. ತಪ್ಪೇನಿದೆ ಎಂದು ಪ್ರಶ್ನಿಸಿದರು. ಕರ್ನಾಟಕ ಪೊಲೀಸ್ ನಂಬರ್ ವನ್ ಪೊಲೀಸ್. ಪೊಲೀಸರು ಯಾರದೇ ಹಿಡಿತದಲ್ಲಿಲ್ಲ; ಅವರದೇ ಆದ ತನಿಖೆ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.
ನಾಲ್ಕು ವರ್ಷ ಎಲ್ಲ ಮಲಗಿದ್ದರು. ನಾವು ಜೀವಂತ ಇದ್ದೇವೆಂದು ತೋರಿಸಲು ಈಗ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸರಕಾರ ಸಮರ್ಥವಿದೆ. ಮುಖ್ಯಮಂತ್ರಿ ಸಮರ್ಥರಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಕಾಂಗ್ರೆಸ್ ಪಕ್ಷದ ಡಿ.ಕೆ.ಸುರೇಶ್ ಸಂಸದರಾದ ಬಳಿಕ ಬದಲಾಗುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಅವರು ಗಲಾಟೆ ಮಾಡುವುದನ್ನು ಸಾರ್ವಜನಿಕರೂ ಗಮನಿಸಲಿದ್ದಾರೆ ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ