ಮಂಡ್ಯ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು 8 ವರ್ಷದ ಅವಧಿಯಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ದೇಶದಲ್ಲಿ ಸಮರ್ಥ, ಸುಭದ್ರ ಆಡಳಿತ ನೀಡಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಮೋದಿ ಅವರ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಕೋವಿಡ್ನಂತಹ ಮಹಾಮಾರಿ ಭಾರತ ಸೇರಿದಂತೆ ಜಗತ್ತನ್ನೇ ತಲ್ಲಣಗೊಳಿಸಿತ್ತು. ಟೀಕೆ, ಟಿಪ್ಪಣಿಯ ನಡುವೆಯೂ ಭಾರತ ಕೋವಿಡ್ ಸೋಂಕನ್ನು ಸಮರ್ಥವಾಗಿ ನಿಭಾಯಿಸಿ ಜಾಗತಿಕ ಮಟ್ಟದಲ್ಲಿ ಶ್ಲಾಘನೆಗೊಳಗಾಗುವಂತೆ ಪ್ರಧಾನಿ ಮೋದಿಜಿಯವರು ಮಾಡಿದ್ದಾರೆ. ಸ್ವಚ್ಛ ಭಾರತ್, ಆಯುಷ್ಮಾನ್ ಕಾರ್ಡ್, ಜನಧನ್ ಯೋಜನೆ, ಪಿಎಂ ಕಿಸಾನ್ ಯೋಜನೆ, ಪಿಎಂ ಗರೀಬ್ ಕಲ್ಯಾಣ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ, ಜಲಜೀವನ್ ಮಿಷನ್, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದ್ದಾರೆ. ರೈತರ ಆದಾಯವನ್ನು ಸುಧಾರಿಸಲು ಪ್ರಧಾನಿ ಮೋದಿ ಹಲವು ರೈತಪರ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ದೇಶದ 12 ಕೋಟಿ ರೈತರಿಗೆ 1.82 ಲಕ್ಷ ಕೋಟಿ ನೀಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ 6 ಸಾವಿರದ ಜೊತೆಗೆ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿದ್ದರು. ಈ ಯೋಜನೆಯಲ್ಲಿ ಕರ್ನಾಟಕದ 53.83 ಲಕ್ಷ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 8502 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ 3861 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 2.62 ಲಕ್ಷ ರೈತರಿಗೆ ಕೇಂದ್ರ ಸರ್ಕಾರದಿಂದ 402 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕರ್ನಾಟಕ ಸರ್ಕಾರದಿಂದ 2.51 ಲಕ್ಷ ರೈತರಿಗೆ 195 ಕೋಟಿ ಅನುದಾನ ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡರವರು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮನೆ ಮನೆಗೂ ಶುದ್ಧ ಕುಡಿಯುವ ನೀರು ನೀಡಲಾಗುತ್ತದೆ. ಈ ಯೋಜನೆಯಲ್ಲಿ ಮಂಡ್ಯ ಜಿಲ್ಲೆಗೆ 1600 ಕೋಟಿ ಅನುದಾನ ನೀಡಿದ್ದು, ಎರಡು ಹಂತದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಮೋದಿ ಸರ್ಕಾರ ಕಳೆದ 8 ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ ವಿವಿಧ ಯೋಜನೆಗಳ ಮೂಲಕ 1 ಲಕ್ಷದ 29 ಸಾವಿರದ 776 ಕೋಟಿ ರೂಪಾಯಿ ಕೊಡುಗೆ ನೀಡಿದೆ ಎಂದು ತಿಳಿಸಿದರು.
ಮೋದಿ ಸುಭದ್ರ ಆಡಳಿತ ಹಾಗೂ ಸಮರ್ಥ ನಾಯಕತ್ವಕ್ಕೆ ಇಡೀ ವಿಶ್ವವೇ ಮೆಚ್ಚಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ದಿಗ್ವಿಜಯ ಸಾಧಿಸಲಿದೆ. ಕರ್ನಾಟಕದಲ್ಲೂ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಚಿವ ಡಾ.ನಾರಾಯಣಗೌಡ ಅವರು ವಿಶ್ವಾಸವ್ಯಕ್ತಪಡಿಸಿದರು.
ಇದೇ ವೇಳೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ ಪಿ ಉಮೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ